Fact Check | ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿಲ್ಲ

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೇಂದ್ರ ಮಂತ್ರಿಗಳೇ ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ತಮ್ಮ ಬಿಜೆಪಿ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದು, ಜನರನ್ನು ಲೂಟಿ ಮಾಡಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಅವರೇ ಹೇಳಿದ್ದಾರೆ ಎಂಬ ಟಿಪ್ಪಣಿಯೊಂದಿಗೆ ವಿಡಿಯೋವಿನ ಕ್ಲಿಪ್‌ ಅನ್ನು ವ್ಯಾಪಕವಾಗಿ ಶೇರ್ ಮಾಡಲಾಗುತ್ತಿದೆ.

ಈ ವಿಡಿಯೋದಲ್ಲಿ” ಮಧ್ಯಪ್ರದೇಶದ ಮೋಹನ್ ಯಾದವ್ ಅವರ ಸರ್ಕಾರದಿಂದ ಸಾರ್ವಜನಿಕರ ಮೇಲೆ ದೊಡ್ಡ ದಾಳಿಯೇ ನಡೆಯುತ್ತಿದೆ. ವಿದ್ಯುತ್ ದಲ್ಲಾಳಿಗಳು ಎಲ್ಲವನ್ನು ಮಾರಾಟ ಮಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳ ಸೋರಿಕೆ ನಡೆಯುತ್ತಿದೆ. ಇದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.” ಎಂದು ಬರೆದುಕೊಂಡು ವೈರಲ್ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಲವು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವಿಡಿಯೋವಿನ ಅಸಲಿಯತ್ತು ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

 

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋ ಕುರಿತು ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಪರಿಶೀಲನೆ ನಡೆಸಿದೆವು. ಈ ವೇಳೆ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ 2 ಅಕ್ಟೋಬರ್ 2024 ರಂದು ಹಂಚಿಕೊಳ್ಳಲಾದ ವಿಡಿಯೋದ ಪೂರ್ಣ ಆವೃತ್ತಿ ಕಂಡುಬಂದಿದೆ. ಇದರಲ್ಲಿ ಅವರು ಜಾರ್ಖಂಡ್‌ನ  ಹೇಮಂತ್ ಸೋರೆನ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಕಂಡುಬಂದಿದೆ.

ಇದರ ಆಧಾರದ ಮೇಲೆ ಇನ್ನಷ್ಟು ಪರಿಶೀಲನೆ ನಡೆಸಿದಾಗ ಶಿವರಾಜ್ ಸಿಂಗ್ ಚೌಹಾಣ್ ಅವರ ಕಚೇರಿಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಜೆಎಂಎಂ ಮತ್ತು ಕಾಂಗ್ರೆಸ್‌ನ ಸಮ್ಮಿಶ್ರ ಸರ್ಕಾರದ  ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವುದು ಕಂಡು ಬಂದಿದೆ. ಇದರಲ್ಲಿ “ಜಾರ್ಖಂಡ್ ಸರ್ಕಾರ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದೆ. ಯುವಕರು ಕೆಲಸವಿಲ್ಲದೆ ಪರದಾಡುವ ಹಾಗಾಗಿದೆ. ಇಲ್ಲಿ ಬದುಕು ಆರಂಭಗೊಳ್ಳುವ ಮುನ್ನವೇ ಮುಕ್ತಾಯಗೊಳ್ಳುವ ಹಂತಕ್ಕೆ ತಲುಪಿದೆ. ಇಲ್ಲಿನ ಮಣ್ಣನ್ನು ಉಸಬೇಕಾಗಿದೆ” ಎಂದು ಪೋಸ್ಟ್ ಮಾಡಿರುವುದು ಅಧಿಕೃತ ವಿಡಿಯೋದಲ್ಲಿ ಕಂಡು ಬಂದಿದೆ ಇದರ ಆಧಾರದ ಮೇಲೆ ಕೆಲವೊಂದು ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕೂಡ ಕಂಡು ಬಂದಿವೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಕೇಂದ್ರ ಸಚಿವ ಶಿವರಾಜಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ತಮ್ಮ ಬಿಜೆಪಿ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ. ಮೂಲ ವಿಡಿಯೋದಲ್ಲಿ ಜಾರ್ಖಂಡ್ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸುವುದು ಕಂಡುಬಂದಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಎಡಿಟ್‌ ಮಾಡಿ ಹಂಚಿಕೊಳ್ಳಲಾಗುತ್ತಿದೆ. ಇಂತಹ ವಿಡಿಯೋಗಳು ಕಂಡು ಬಂದರೆ ಅವುಗಳನ್ನು ಪರಿಶೀಲಿಸದೆ ಹಂಚಿಕೊಳ್ಳಬೇಡಿ.


ಇದನ್ನೂ ಓದಿ : Fact Check : ರತನ್ ಟಾಟಾರವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *