Fact Check | ಬಿಹಾರದ ಮೋತಿಹಾರಿಯಲ್ಲಿ ಪೊಲೀಸರ ಮೇಲೆ ಮುಸಲ್ಮಾನರು ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಇತ್ತೀಚೆಗಷ್ಟೇ ಬಿಹಾರದ ಮೋತಿಹಾರಿಯಲ್ಲಿ ಅಪಹರಣ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಮುಸಲ್ಮಾನರು ದಾಳಿ ನಡೆಸಿ, ಹಲ್ಲೆ ಮಾಡಿದ್ದಾರೆ. ಇಬ್ಬರು ಪೊಲೀಸರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಇವರನ್ನು ನೀವು ಶಾಂತಿಪಾಲಕರು ಎಂದು ಕರೆಯುತ್ತೀರಾ? ಈಗ ಇವರ ಜನಸಂಖ್ಯೆ ಹೆಚ್ಚಾಗುತ್ತಿದೆ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಹಿಂದೂಗಳು ಭಾರತದಲ್ಲಿ ಬದುಕಲು ಕೂಡ ಭಯಪಡಬೇಕಾಗುತ್ತದೆ.” ಎಂದು ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಪೋಸ್ಟ್‌ನಲ್ಲಿ ಕಂಡುಬಂದ ವಿಡಿಯೋದಲ್ಲಿ, ಹಲವರು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಹೀಗಾಗಿ ಸಾಕಷ್ಟು ಮಂದಿ ಹಲ್ಲೆ ನಡೆಸಿದವರು ಮುಸಲ್ಮಾನರು ಎಂದು ಭಾವಿಸಿ, ವೈರಲ್ ವಿಡಿಯೋವನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಲವರು ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ, ಪೊಲೀಸರಿಗೆ ಮುಸಲ್ಮಾನರಿಂದ ರಕ್ಷಣೆಯೇ ಇಲ್ಲ ಎಂಬ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ಅಸಲಿಯತ್ತು ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್ ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋ ಕುರಿತು ಪರಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಮೋತಿಹಾರಿ ಪೊಲೀಸರ X ಹ್ಯಾಂಡಲ್ ಅನ್ನು ಪರಿಶೀಲನೆ ನಡೆಸಿದೆವು. ಈ ವೇಳೆ ನಮಗೆ 1 ನವೆಂಬರ್‌ 2024ರಂದು ಈ ಖಾತೆಯಲ್ಲಿ ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಿರುವುದು ಕಂಡು ಬಂದಿದೆ. ಇದರಲ್ಲಿ ಪಹರಣಕಾರನನ್ನು ವಶಪಡಿಸಿಕೊಳ್ಳಲು ಮತ್ತು ಆರೋಪಿಯನ್ನು ಬಂಧಿಸಲು ಪಹರ್‌ಪುರ ಪೊಲೀಸ್ ಠಾಣೆಯ ಪೊಲೀಸರು ಸರಿಯಾ ಲಿಪ್ನಿ ಗ್ರಾಮಕ್ಕೆ ತೆರಳಿದ್ದಾರೆ ಎಂದು ತಿಳಿಸಲಾಗಿದೆ, ಅಲ್ಲಿ ಶಂಭು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಅನಿತಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಹೆಸರಿಸಲಾದ ಏಳು ಮತ್ತು 10-15 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪಹರಪುರ ಪೊಲೀಸ್ ಠಾಣೆಯ ಪ್ರಭಾರಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

 

                             ಪೊಲೀಸರು ಸ್ಪಷ್ಟನೆ ನೀಡಿರುವ ಪೋಸ್ಟ್‌
                                                                                                                             ಪೊಲೀಸರ ಪತ್ರಿಕಾ ಪ್ರಕಟಣೆ

 

ಮೋತಿಹಾರಿ ಪೊಲೀಸರ ಎಕ್ಸ್‌ ಹ್ಯಾಂಡಲ್‌ನಿಂದ ಈ ವಿಷಯದ ಮಾಹಿತಿಯನ್ನು ನವೆಂಬರ್ 2 ರಂದು ಪೋಸ್ಟ್ ಮಾಡಲಾಗಿದೆ. ಇದರ ಪ್ರಕಾರ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳಾದ ಕಪಿಲದೇವ್ ಕುಮಾರ್ ಮತ್ತು ಸಂಜಯ್ ಕುಮಾರ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದು ಪೋಸ್ಟ್ ಮೂಲಕ, ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಮನೋಜ್ ಕುಶ್ವಾಹನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೋತಿಹಾರಿ ಪೊಲೀಸರು ತಿಳಿಸಿದ್ದಾರೆ.

ದೈನಿಕ್ ಜಾಗರಣ್‌ನಲ್ಲಿ ಮೋತಿಹಾರಿ ಆವೃತ್ತಿಯಲ್ಲಿ ಪ್ರಕಟವಾದ ಸುದ್ದಿಯಲ್ಲೂ ಈ ಪ್ರಕರಣಕ್ಕೆ ಸಂಬಂಧಿಸಿದ ಕವರೇಜ್ ಅನ್ನು ಕಾಣಬಹುದು.

ನವೆಂಬರ್ 1 ರಂದು ಈಟಿವಿ ಭಾರತ್‌ನಲ್ಲಿ ಪ್ರಕಟವಾದ ಸುದ್ದಿಯಲ್ಲಿ ವೈರಲ್ ವೀಡಿಯೊವನ್ನು ನೋಡಬಹುದು .

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ, ಅಪಹರಣ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದ ಮೇಲೆ ಬಿಹಾರದ ಮೋತಿಹಾರಿಯಲ್ ಮುಸಲ್ಮಾನರು ದಾಳಿ ನಡೆಸಿ, ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು. ಬಂಧಿತ ಆರೋಪಿಗಳಲ್ಲಿರುವವರೆಲ್ಲ ಹಿಂದೂಗಳೇ ಆಗಿದ್ದಾರೆ. ಹಾಗಾಗಿ ವೈರಲ್‌ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ. ಹಾಗಾಗಿ ಈ ಪೋಸ್ಟ್‌ ಅನ್ನು ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.


ಇದನ್ನೂ ಓದಿ  : Fact Check : ನ್ಯಾನ್ಸಿ ಪೆಲೋಸಿಯವರು ಟ್ರಂಪ್‌ರ ಗೆಲುವಿನ ವಿರುದ್ಧ ಪ್ರತಿಕ್ರಿಯಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *