Fact Check | ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ!

“ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಇದು ಎನ್‌ಡಿಎ ಮೈತ್ರಿಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ನಿತಿಶ್‌ ಕುಮಾರ್‌ ಅವರು ಇಂಡಿಯಾ ಮೈತ್ರಿ ಕೂಟವನ್ನು ಸೇರಬಹುದು. ಇದು ನಿತಿಶ್‌ ಕುಮಾರ್‌ ಅವರ ಅಧಿಕಾರ ದಾಹ ಎಂತಹದ್ದು ಎಂಬುದನ್ನು ಸಾಬೀತು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹೀಗೆ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವನ್ನು ಸಾಕಷ್ಟು ಮಂದಿ ನಿಜವೆಂದು ಭಾವಿಸಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಮೂಡಿಸಿರುವುದರಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಪತನವಾಗಬಹುದು ಎಂಬ ಅಭಿಪ್ರಾಯವನ್ನು ಹೊರ ಹಾಕುತ್ತಿದ್ದಾರೆ. ಹೀಗೆ ವಿವಿಧ ರೀತಿಯ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಮೂಡುತ್ತಿದ್ದು, ಈ ಫ್ಯಾಕ್ಟ್‌ಚೆಕ್‌ನಲ್ಲಿ ವೈರಲ್‌ ವಿಡಿಯೋ ಕುರಿತು ಪರಿಶೀಲನೆಯನ್ನು ನಡೆಸೋಣ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ವಿಡಿಯೋದ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ ನಮಗೆ  5 ಸೆಪ್ಟೆಂಬರ್ 2022 ರಂದು ವಿವಿಧ ಮಾಧ್ಯಮಗಳು ಪ್ರಕಟಿಸಿದ ವರದಿಗಳು ಕಂಡು ಬಂದಿದ್ದು, ಅದರಲ್ಲಿ ಈ ವೈರಲ್‌ ವಿಡಿಯೋ ಕೂಡ ಕಂಡು ಬಂದಿದೆ. ಈ ಮೂಲಕ ಈ ವೈರಲ್‌ ವಿಡಿಯೋ ಇತ್ತೀಚಿನದ್ದಲ್ಲ ಎಂಬುದು ಸಾಬೀತಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ನಾವು ಹುಡುಕಾಟವನ್ನು ನಡೆಸಿದಾಗ, “2022 ರಲ್ಲಿ ನಿತೀಶ್‌ ಕುಮಾರ್‌ ಅವರು ಬಿಜೆಪಿಯನ್ನು ತೊರೆದ ನಂತರ ಆರ್‌ಜೆಡಿ ನಾಯಕರ ಜೊತೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಅದೇ 2022ರ ವಿವಿಧ ಮಾಧ್ಯಮಗಳ ವರದಿಗಳಲ್ಲಿ “2024 ರ ಲೋಕಸಭೆ ಚುನಾವಣೆಗೆ ವಿವಿಧ ಪಕ್ಷಗಳ ನಾಯಕರೊಂದಿಗೆ ಏಕತೆಯ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗುವ ಮೊದಲು ಪಾಟ್ನಾದಲ್ಲಿ ಆರ್‌ಜೆಡಿ  ನಾಯಕ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಭೇಟಿಯಾದರು.” ಎಂದು ಉಲ್ಲೇಖಿಸಿರುವುದು ಕೂಡ ಕಂಡುಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಎಲ್ಲಾ ಅಂಶಗಳನ್ನು ಗಮನಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ರೀತಿಯಲ್ಲಿ ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ, ಎನ್‌ಡಿಎ ಸರ್ಕಾರ ಸಂಕಷ್ಟದಲ್ಲಿದೆ ಎಂಬುದೆಲ್ಲ ಸುಳ್ಳು. ವೈರಲ್‌ ವಿಡಿಯೋ 2022ರದ್ದಾಗಿದೆ. ಹಾಗಾಗಿ ಇಂತಹ ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯಾಸತ್ಯತೆ ಏನು ಎಂಬುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.


ಇದನ್ನೂ ಓದಿ : Fact Check | ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಗಣೇಶ ಪೂಜೆಯನ್ನು ಮಧ್ಯಂತರ ಸರ್ಕಾರ ನಿಷೇಧಿಸಿದೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *